ಶ್ರೀನಿವಾಸಪುರ: ಸ್ವಾತಂತ್ರ್ಯದ ಸವಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎಂಬ ಆಶಯ ಸಾಕಾರಗೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದರು.
ಕ್ಷೇತ್ರದ ಯುವ ಸಮುದಾಯಕ್ಕೆ ಉದ್ಯೋಗಾವಕಾಶ ಒದಗಿಸುವ ಉದ್ದೇದಿಂದ ಪಟ್ಟಣದ ಹೊರವಲಯದಲ್ಲಿ ಕೈಗಾರಿಕಾ ವಲಯ ನಿರ್ಮಿಸಲಾಗುವುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪಟ್ಟಣದಲ್ಲಿ ನವನಗರ ಯೋಜನೆ ಜಾರಿಗೆ ತಂದು ನಾಗರಿಕರಿಗೆ ಅಗತ್ಯವಾದ ರಸ್ತೆ, ಒಳಚರಂಡಿ ನಿರ್ಮಿಸಲಾಗುವುದು. ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಮೊದಲ ಅದ್ಯತೆ ನೀಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಯೋಧರನ್ನು ಸ್ಮರಿಸಬೇಕು. ಅವರ ತ್ಯಾಗ, ಬಳಿದಾನ ದೇಶದ ಸ್ವಾತಂತ್ರ್ಯ ರಕ್ಷಣೆಗೆ ಸ್ಫೂರ್ತಿಯಾಗಬೇಕು. ವಿವಿಧತೆಯಲ್ಲಿ ಏಕತೆ ನೀತಿ ಮುಂದುವರಿಯಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕರಿ ಕೃಷ್ಣಪ್ಪ, ಪ್ರಾಂಶುಪಾಲ ರಾಮಾಂಜನೇಯಪ್ಪ ಸ್ವಾತಂತ್ರ್ಯದ ಮಹತ್ವ ಕುರಿತು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಮ್ಮ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೈರೆಡ್ಡಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಆರ್.ದಯಾನಂದ, ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ, ವೆಂಕಟಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ಗಣೇಶ್, ಮುಖಂಡ ಶೇಷಾಪುರ ಗೋಪಾಲ್ ಮತ್ತಿತರರು ಇದ್ದರು.
ಸಮಾರಂಭದಲ್ಲಿ ಪೊಲೀಸ್, ಗೃಹರಕ್ಷಕ ದಳ ಹಾಗೂ ವಿದ್ಯಾರ್ಥಿಗಳಿಂದ ಪಥಸಂಚಲನ ಏರ್ಪಡಿಸಲಾಗಿತ್ತು. ಬೇರೆ ಬೇರೆ ಶಾಲಾ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೆ ಸಂಬಂಧಿಸಿದ ನೃತ್ಯ ಹಾಗೂ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯರು ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.