ಶ್ರೀನಿವಾಸಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯ ಎತ್ತಿಹಿಡಿದಿದೆ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.
ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ, ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದಕ್ಕಾಗಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಎರಡೂ ಸಮುದಾಯಗಳ ಬಹುದಿನಗಳ ಬೇಡಿಕೆಯಾಗಿತ್ತು. ಅದನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂ ಸದಸ್ಯರು ಈಡೇರಿಸಿದ್ದಾರೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮೀಸಲಾತಿ ಶೇ.15 ರಿಂದ ಶೇ.17ಕ್ಕೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಪಂಗಡದ ಮೀಸಲಾತಿ ಶೇ.3 ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕೆ ಕಾರಣರಾದ ಮುಖ್ಯ ಮಂತ್ರಿ, ಸಚಿವ ಸಂಪುಟದ ಸದಸ್ಯರು ಹಾಗೂ ಬೆಂಬಲಿಸಿದ ಲೋಕಸಭಾ ಸದಸ್ಯರು ಅಭಿನಂದನಾರ್ಹರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆ ಮಾಡಿದರು. ಬಸ್ ನಿಲ್ದಾಣ ವೃತ್ತದಿಂದ ಅಂಬೇಡ್ಕರ್ ಉದ್ಯಾನಕ್ಕೆ ಮೆರವಣಿಗೆ ಹೊರಟ ಮುಖಂಡರು ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಮುಖಂಡರಾದ ರೋಣೂರು ಚಂದ್ರಶೇಖರ್, ಕೊಟ್ರಗುಳಿ ನಾರಾಯಣಸ್ವಮಿ, ಶಫಿವುಲ್ಲಾ, ಜೆಸಿಬಿ ಅಶೋಕರೆಡ್ಡಿ, ವಿ.ನಿಶಾಂತ್ ಕುಮಾರ್, ಜಯಣ್ಣ, ಹೊದಲಿ ನಾರಾಯಣಸ್ವಾಮಿ, ರಾಜು, ಶ್ರೀನಾಥಬಾಬು, ಆಂಜಿನಪ್ಪ ಇದ್ದರು.