ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ತಾಲ್ಲೂಕು ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಹಾಗೂ ಮಧ್ಯವರ್ತಿಗಳ ಹಾವಳಿ ನಿಲ್ಲಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಸೋಮವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಕಾರ್ಯದರ್ಶಿ ವೀರಭದ್ರಸ್ವಾಮಿ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ ಕಚೇರಿ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ರೈತರು ಹಾಗೂ ಸಾರ್ವಜನಿಕರ ಕೆಲಸಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂದು ಹೇಳಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯದರ್ಶಿ ಎನ್.ಜಿ.ಶ್ರೀರಾಮರೆಡ್ಡಿ ಮಾತನಾಡಿ, ಕಚೇರಿಗಳಲ್ಲಿ ಪರಿಸ್ಥಿತಿ ಹದಗೆಟ್ಟಿರುವುದರಿಂದ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ನಿಯಮದಂತೆ ಕಾರ್ಯನಿರ್ವಹಿಸದ ಅಧಿಕಾರಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು. ರೈತರು ಹಾಗೂ ಸಾರ್ವಜನಿಕರ ಕೆಲಸಗಳು ಸುಗಮವಾಗಿ ಆಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಟಿ.ಎನ್.ರಾಮೇಗೌಡ, ಕಾರ್ಯಾಧ್ಯಕ್ಷ ಎಂ.ಬೈರಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಬಿ.ನಾರಾಯಣಸ್ವಾಮಿ, ಮುಖಂಡರಾದ ಪಿ.ಗಂಗಾಧರ್, ರಮೇಶ್, ನರಸಿಂಹಯ್ಯ, ಈಶ್ವರರೆಡ್ಡಿ, ಶ್ರೀಧರ್, ಅಸ್ಲಂಪಾಷ, ರಾಮಕೃಷ್ಣ, ಶ್ರೀನಿವಾಸರೆಡ್ಡಿ, ಸಿ.ಬಿ.ಮೋಹನ್, ರಾಜಣ್ಣ, ನರಸಿಂಹಮೂರ್ತಿ, ರಮೇಶ್, ಶಶಿಧರರೆಡ್ಡಿ ಇದ್ದರು.