

ಗಂಗೊಳ್ಳಿ, ಜು.15; ಇಂದು ಬೆಳಿಗ್ಗೆ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ದೋಣಿಯಲ್ಲಿ ನಾಲ್ಕು ಜನರು ಮೀನುಗಾರರು ಹೊರಟಿದ್ದು, ಅಲೆಯ ರಭಸಕ್ಕೆ ಸಿಲುಕಿ ದೋಣಿ ಮಗುಚಿದ್ದು, ಒಬ್ಬ ಮೀನುಗಾರ ಈಜಿ ಬೇರೆ ದೋಣಿ ತಲುಪಿದ್ದು ಇನ್ನೂ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ.

ಗಂಗೊಳ್ಳಿ ಸೀವಾಕ್ ಬಳಿ ಈ ದುರ್ಘಟನೆ ನಡೆದಿದ್ದು, ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ರೋಹಿತ್ ಖಾರ್ವಿ ನಾಪತ್ತೆಯಾದ ಮೀನುಗಾರರು. ಸಂತ ಸಂತೋಷ್ ಖಾರ್ವಿ ಎನ್ನುವವರನ್ನು ಬೇರೊಂದು ಬೋಟ್ ನವರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿಪಾಯಿ ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯ ನಡೆಸುತ್ತಿದ್ದಾರೆ. ದೋಣಿ ಸಮುದ್ರ ಪಾಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ ಎನ್ನಲಾಗಿದೆ.

