

ಕುಂದಾಪುರ: ನವೆಂಬರ್ 12ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಡ್ಲೂರಿನಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತುಳಸಿ ವಿದ್ಯಾಮಂದಿರ, ಹಳ್ನಾಡು ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಒಟ್ಟು 30 ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಾಗೂ 12 ವಿದ್ಯಾರ್ಥಿಗಳು ತೃತೀಯ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಸಿ ಎ ಕೃಷ್ಣರಾಯ ಶಾನುಭಾಗ್, ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇಷ್ಮಾ ಪ್ರದೀಪ್ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಶೈಕ್ಷಣಿಕ ಸಾಧನೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳು, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ವಿದ್ಯಾರ್ಥಿಗಳ ಸರ್ವತೋಮುಖ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ತುಳಸಿ ವಿದ್ಯಾಮಂದಿರ ಸದಾ ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಪ್ರತಿಭೆ, ಪರಿಶ್ರಮ ಹಾಗೂ ಶಿಕ್ಷಕರ ಸೂಕ್ತ ಮಾರ್ಗದರ್ಶನದಿಂದ ಈ ಹೆಮ್ಮೆಯ ಸಾಧನೆ ಸಾಧ್ಯವಾಗಿದೆ.
ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಶುಭ ಹಾರೈಸಿದ್ದಾರೆ.

