

ಶ್ರೀನಿವಾಸಪುರ: ಗ್ರಾಮೀಣ ಸ್ವಚ್ಛತೆ, ಮೂಲಭೂತ ಸೌಲಭ್ಯಗಳ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯದ ಮಾನ್ಯ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ತಾಲ್ಲೂಕಿನ ಗೌನಿಪಲ್ಲಿ, ರಾಯಲ್ಪಡು, ನೆಲವಂಕಿ–ಲಕ್ಷ್ಮೀಪುರ ಹಾಗೂ ತಾಡಿಗೋಳ್ ಕ್ರಾಸ್ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪಲೋಕಾಯುಕ್ತರು, ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿ, ಸ್ವಚ್ಛತಾ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗದೇ ನಿರಂತರ ಚಟುವಟಿಕೆಯಾಗಬೇಕು ಎಂದು ಹೇಳಿದರು.
ತಾಲ್ಲೂಕಿನ ಹಲವು ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಮೂಲಭೂತ ಸಮಸ್ಯೆಗಳನ್ನು ಪರಿಶೀಲಿಸಿರುವುದಾಗಿ ತಿಳಿಸಿದ ಅವರು, ಕರ್ತವ್ಯಲೋಪ ತೋರಿದ ಅಧಿಕಾರಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸರ್ಕಾರದ ಸೌಲಭ್ಯಗಳು ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಆಡಳಿತ ಯಂತ್ರವು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಸಮಸ್ಯೆಗಳು ಮರುಕಳಿಸಿದರೆ ಸಂಬಂಧಿತ ಸಿಬ್ಬಂದಿಯೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಮಾತನಾಡಿ, ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ಅಭಿವೃದ್ಧಿ ಸಾಧ್ಯವೆಂದರು. ಜಿಲ್ಲೆಯ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹಣೆಯಲ್ಲಿ ಶೇ.100 ಸಾಧನೆ ಮಾಡಿರುವುದು ಹಾಗೂ ನರೇಗಾ ಯೋಜನೆಯಲ್ಲಿ ಸಂಪೂರ್ಣ ಮಾನವ ದಿನಗಳ ಪ್ರಗತಿ ಸಾಧಿಸಿರುವುದು ಗಮನಾರ್ಹ ಎಂದು ಹೇಳಿದರು. ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ಗ್ರಾಮ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಪ್ರತಿ ಸ್ವಚ್ಛತಾ ವಾಹಿನಿಗೆ ಜಿಪಿಎಸ್ ಟ್ರ್ಯಾಕರ್ ಅಳವಡಿಸಿ ಕಸ ಸಂಗ್ರಹಣೆಯ ಮೇಲ್ವಿಚಾರಣೆ ಮಾಡಲಾಗುತ್ತಿದೆ. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸರ್ವೇಶ್ ಮಾತನಾಡಿ, ಪ್ರತಿದಿನ ಗ್ರಾಮಗಳಲ್ಲಿ ಕಸ ಸಂಗ್ರಹಣೆ, ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ಚರಂಡಿ ಸ್ವಚ್ಛತೆಗೆ ಇಂಗು ಗುಂಡಿಗಳ ಅನುಷ್ಠಾನ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಗ್ರಾಮಾಭಿವೃದ್ಧಿಗೆ ಶೇ.100 ತೆರಿಗೆ ವಸೂಲಾತಿಗೂ ಒತ್ತು ನೀಡಲಾಗಿದೆ ಎಂದರು.
ಈ ವೇಳೆ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ರಸ್ತೆ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಸಾರ್ವಜನಿಕರು ಮತ್ತು ವ್ಯಾಪಾರಿಗಳಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ನರೇಗಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.







