
ಶ್ರೀನಿವಾಸಪುರ : ಈಗಾಗಲೇ ನನ್ನ ಅವಧಿಯಲ್ಲಿ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಪಾತಕೋಟೆ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೆ ಗೌಡತಾತಗಡ್ಡ ಪುಲಗೂರಕೋಟೆ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.
ಸಾತನೂರು ಗೊಲ್ಲಪಳ್ಳಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ಕಾಮಗಾರಿಯನ್ನು ಅಂದಾಜು ₹60 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸುವ ಮೂಲಕ ಪೂರ್ಣಗೊಳಿಸಲಾಗಿದೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬುರಕಾಯಿಲಕೋಟೆ ಹಾಗೂ ದೇವರೆಡ್ಡಿಪಳ್ಳಿ ಗ್ರಾಮಗಳಲ್ಲಿ ಸಹ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುವುದು.
ಒಂದು ವಾರದೊಳಗೆ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಲಾಗುವುದು. ನಂತರ ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ತಿಂಗಳ 17ರಂದು ನ್ಯಾಯಾಲಯದಲ್ಲಿ ತೀರ್ಪು ಬರುವ ಸಾಧ್ಯತೆ ಇರುವುದಾಗಿ ಮಾಹಿತಿ ನೀಡಿದ ಅವರು, ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಗಮನಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಿಎಂಐಡಿಪಿ ಯೋಜನೆಯಡಿ ಆಂಜನೇಯ ದೇವಾಲಯದ ಬಳಿ ಸಿಸಿ ರಸ್ತೆ ನಿರ್ಮಾಣಕ್ಕೆ ₹60 ಲಕ್ಷ ಹಾಗೂ ಕಾಲೋನಿಗಳಲ್ಲಿನ ವಿವಿಧ ಕಾಮಗಾರಿಗಳಿಗೆ ₹45 ಲಕ್ಷ ಅನುದಾನ ಮಂಜೂರಾಗಿದೆ. ಗುತ್ತಿಗೆದಾರರು ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿ ಆರ್. ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬಾಲವತಿ ಜಯರಾಮ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಶ್ರೀನಿವಾಸರೆಡ್ಡಿ, ಇಂಜಿನಿಯರ್ ಮುನಿಕೃಷ್ಣ, ಶಿವಪುರ ಗಣೇಶ್, ಜಗದೀಶ್, ಮುನಿರೆಡ್ಡಿ, ಶ್ರೀನಿವಾಸ್, ತೂಪಲ್ಲಿ ಮಧುಸೂದನರೆಡ್ಡಿ, ಕುಮ್ಮಗುಂಟೆ ಮನು, ಇಸ್ಮಾಯಿಲ್, ಎಲ್.ಕೆ.ಆರ್. ರವಿ, ಎಲ್.ಕೆ.ಆರ್. ರಘುನಾಥ್, ಕೊಂಡಸಂದ್ರ ನಾಗರಾಜ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

