ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಿ.ಸತ್ಯಭಾಮ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

 

ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಿ.ಸತ್ಯಭಾಮ

 

 

 

ಕೋಲಾರ : ಜೂನ್ 25 ರಿಂದ ಜುಲೈ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಸೂಚಿಸಿದರು.

ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 20,907 ವಿದ್ಯಾರ್ಥಿಗಳು, 70 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಹಿಂದಿನ ವರ್ಷಗಳಲ್ಲಿ ಒಂದು ಕೊಠಡಿಗೆ 24 ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತಿತ್ತು. ಆದರೆ ಈ ವರ್ಷ ಕರೋನಾ ಹಿನ್ನೆಲೆಯಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಒಂದು ಕೊಠಡಿಗೆ 18 ರಿಂದ 20 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಲಾಗುತ್ತಿದೆ. ಪ್ರತಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸರಿಂಗ್ ಮಾಡಿಸಲಾಗುವುದು. ರೋಟರಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಾ ಸಂಸ್ಥೆಗಳು ಮಾಸ್ಕ್‍ಗಳನ್ನು ನೀಡಿದ್ದು, ಪರೀಕ್ಷೆ ಬರೆಯುವ ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡಲಾಗುವುದು. ಪರೀಕ್ಷೆ ಪ್ರಾರಂಭಕ್ಕೂ ಮುನ್ನ ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಯಾನಿಂಗ್ ಮಾಡಿ ಸ್ಯಾನಿಟೈಸರ್ ನೀಡಲಾಗುವುದು ಎಂದರು.

ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕೊರತೆ ಉಂಟಾಗದಂತೆ ವಿದ್ಯಾರ್ಥಿಗಳು ಬರುವ ಮಾರ್ಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸ್‍ಗಳನ್ನು ಬಿಡುವಂತೆ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಅವರಿಗೆ ಸೂಚಿಸಿದ ಅವರು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಯಾವ ಯಾವ ಹಳ್ಳಿಯಿಂದ ಮಕ್ಕಳು ಬರುತ್ತಾರೆ ಎಂಬ ಪಟ್ಟಿಯನ್ನು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ನೀಡುವಂತೆ ಸೂಚಿಸಿದರು.

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಕೋಲಾರ ಜಿಲ್ಲೆಯು ಗಡಿ ಭಾಗದಲ್ಲಿದ್ದು, ಹೊರ ರಾಜ್ಯದಿಂದ 9 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಬರುವವರಿದ್ದು, ಇವರಿಗೆ ಆರೋಗ್ಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಪರೀಕ್ಷಾ ದಿನಗಳಂದು ಬೆಸ್ಕಾಂ ಅಧಿಕಾರಿಗಳು ನಿರಂತರ ವಿದ್ಯುತ್ ನೀಡಬೇಕು. ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಕಾಲಾವಕಾಶ ದೊರೆತಿರುವುದರಿಂದ ಉತ್ತಮವಾಗಿ ಅಭ್ಯಾಸ ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉತ್ಸಾಹದಲ್ಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಯಾವುದಾದರೂ ವಿದ್ಯಾರ್ಥಿಗೆ ಕರೋನಾ ಲಕ್ಷಣ ಕಂಡು ಬಂದರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುವುದು, ಪರೀಕ್ಷೆಗೂ ಮುನ್ನ ಯಾವುದೇ ವಿದ್ಯಾರ್ಥಿಗೆ ಕರೋನಾ ಪಾಸಿಟಿವ್ ಕಂಡು ಬಂದರೆ. ಪÀೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಲಾಗುವುದು ಅವರನ್ನು ಪ್ರೆಶ್ ಅಭ್ಯರ್ಥಿಗಳೆಂದೆ ಪರಿಗಣಿಸಲಾಗುವುದು ಎಂದು ಮಾಹಿತಿ ನೀಡಿದರು.

ಅದೇ ರೀತಿ ಜೂನ್ 18 ರಂದು ದ್ವಿತೀಯ ಪಿಯುಸಿ ಯ ಇಂಗ್ಲೀಷ್ ಪರೀಕ್ಷೆಯನ್ನು ನಡೆಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರ ರಾಜ್ಯದಿಂದ 60 ವಿದ್ಯಾರ್ಥಿಗಳು ಬರುತ್ತಿದ್ದು ಇವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುತ್ತದೆ. ಒಟ್ಟಿನಲ್ಲಿ ಪರೀಕ್ಷೆಯನ್ನು ಚುನಾವಣೆ ನಡೆಸುವ ರೀತಿಯಲ್ಲಿ ಬದ್ದತೆಯಿಂದ ನಡೆಸಲು ಅಧಿಕಾರಿಗಳು ಸಜ್ಜಾಗಬೇಕು ಎಂದ ಅವರು ಕರೋನ ಸಂದರ್ಭದಲ್ಲಿ ಪ್ರತಿಯೊಬ್ಬರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರತ್ನಯ್ಯ ಅವರು ಮಾತನಾಡಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಯಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕರೋನಾ ಸೋಂಕಿನಿಂದ ಮುಂದೂಡಲಾಗಿದ್ದು, ಪರೀಕ್ಷೆಯು ಇದೇ ತಿಂಗಳ 25 ರಿಂದ ನಡೆಯಲಿದ್ದು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಅವರ ಮನೆಗೆ ಅವರ ಸೆಂಟರ್ ಮಾಹಿತಿ ಹಾಗೂ ರೂಂ ನಂ. ಗಳ ಮಾಹಿತಿಯನ್ನು ಮೊದಲೆ ತಿಳಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗದೆ ನೇರವಾಗಿ ತಮ್ಮ ರೂಂಗೆ ತೆರಳಿ ಪರೀಕ್ಷೆ ಬರೆಯಲು ನೆರವಾಗುತ್ತದೆ. ಯಾವುದೇ ಲೋಪ ಉಂಟಾಗದಂತೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸುತ್ತೇವೆ ಎಂದರು.

ಸಭೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ಉಪಾಧ್ಯಕ್ಷರಾದ ಡಾ.ಚಂದ್ರಶೇಖರ್, ಪರೀಕ್ಷಾ ನೂಡಲ್ ಅಧಿಕಾರಿಗಳಾದ ನಾಗೇಂದ್ರಪ್ರಸಾದ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಸೇರಿದಂತೆ ತಾಹಶೀಲ್ದಾರ್‍ಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.