ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ನೀಡಲಾಗಿದ್ದ ಬಂದ್ ಕರೆ ಯಶಸ್ವಿಯಾಯಿತು. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲ್ಪಟ್ಟಿತ್ತು. ವಾಹನಗಳು ರಸ್ತೆಗೆ ಇಳಿಯಲಿಲ್ಲ. ಸತತವಾಗಿ ಮಳೆ ಸುರಿಯುತ್ತಿದ್ದ ಪರಿಣಾಮವಾಗಿ ಜನ ಸಂದಣಿ ಸಹಜವಾಗಿಯೆ ಕಡಿಮೆ ಇತ್ತು. ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಜನರೇ ಇರಲಿಲ್ಲ. ಪಟ್ಟಣದ ಎಂಜಿ ರಸ್ತೆಯಲ್ಲಿ ವಿವಿಧ ಕಾರ್ಮಿಕ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಸುರಿಯುವ ಮಳೆಯಲ್ಲಿ ಕೊಡೆ ಹಿಡಿದು ರಸ್ತೆ ತಡೆ ನಡೆಸಿದರು. ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷೆ ಜಿ.ಈಶ್ವರಮ್ಮ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯಿಂದಾಗಿ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ರೈತ ಸ್ನೇಹಿಯಲ್ಲದ ನೀತಿಗಳ ಪರಿಣಾಮವಾಗಿ ಕೃಷಿಕ ಸಮುದಾಯ ಸಾಲದ ಸುಳಿಗೆ ಸಿಕ್ಕಿ ನಲುಗಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ, ವಿದ್ಯುತ್ ಕಾಯ್ದೆಯಂಥ ಕಾಯ್ದೆಗಳು ರೈತ ಸಂಕುಲಕ್ಕೆ ಮಾರಕವಾಗಿವೆ. ಇವುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್, ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ನಾಗಭೂಷಣ, ಶ್ರೀನಿವಾಸ್, ಮಮತ, ಮೂರ್ತಿ, ಪುಷ್ಪ, ರಾಧಮ್ಮ, ವೆಂಕಟರವಣಪ್ಪ ಇದ್ದರು.ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ