ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಕೋಲಾರ : ವಿವಿಧ ಕಾರಣಗಳಿಂದ ಮಾನಸಿಕ ಖಿನ್ನತೆ ಮತ್ತು ಒತ್ತಡಕ್ಕೆ ಒಳಗಾಗಿರುವರನ್ನು ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು.ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಪೊಲೀಸ್ ಇಲಾಖೆ , ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳಿಗೆ ಆರ್ಡರ್ 32 ರಲ್ಲಿ , ಚಾಪ್ಟರ್ 55 ರಲ್ಲಿ , ಐ . ಪಿ . ಸಿ ಸೆಕ್ಷನ್ 84 ಮತ್ತು 98 ಮೂಲಕ ಅವರಿಗೆ ಸಹಾಯ ಮಾಡಬಹುದಾಗಿದೆ . ಕೌಟುಂಬಿಕ ವ್ಯವಹಾರಗಳು , ಪತಿ ಪತ್ನಿ ವಿಚ್ಛೇದನ , ಸ್ವಯಂ ತೊಂದರೆ ವಿಚಾರಗಳಿಗೆ ಸಂಬಂಧಿಸಿದಂತೆ ಕೆಲವರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದರು . ಮಾನಸಿಕ ಅಸ್ವಸ್ಥರು ಕಂಡುಬಂದರೆ ಅಂತಹವರನ್ನು ಗುರುತಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಆರೋಗ್ಯ ಇಲಾಖೆಯ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿ , ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಗಮನಹರಿಸಿ ಇಂತಹ ಖಾಯಿಲೆಗಳನ್ನು ತಡೆಯಬೇಕಾಗಿದೆ ಎಂದರು . ವಕೀಲರ ಸಂಘದ ಕಾರ್ಯದರ್ಶಿಗಳಾದ ರಘುಪತಿ ಗೌಡ ಅವರು ಮಾತನಾಡಿ , ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳು ಯಾವ ಕಾರಣಕ್ಕಾಗಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಗುರುತಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಿ ಅವರನ್ನು ಸಮಾಜಕ್ಕೆ ಉತ್ತಮ ಪ್ರಜೆಯಾಗಿ ಮಾಡಬೇಕು , ಹಳ್ಳಿ ಹಳ್ಳಿಗಳಲ್ಲಿ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಬೇಕು ಎಂದರು . ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿಗಳಾದ ಡಾ ಎನ್ . ಸಿ ನಾರಾಯಣಸ್ವಾಮಿ ಅವರು ಮಾತನಾಡಿ , ಪ್ರತಿ ವರ್ಷ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮಾಡಲಾಗುತ್ತದೆ . ಅದರಂತೆಯೇ ‘ ಎಲ್ಲರಿಗೂ ಮಾನಸಿಕ ಆರೋಗ್ಯ : ಹೆಚ್ಚಿನ ಹೂಡಿಕೆ – ಚಿಕಿತ್ಸೆಗೆ ಹೆಚ್ಚಿನ ಅವಕಾಶ ‘ ಎಂಬ ಘೋಷಣೆಯೊಂದಿಗೆ ಅಕ್ಟೋಬರ್ 15 ರಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದರು . ಭಾರತದಲ್ಲಿ 4.57 ಕೋಟಿ ಜನರು ಅಲ್ಪ ಮಟ್ಟದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಹಾಗೂ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಜನಕ್ಕೆ ಚಿಕಿತ್ಸೆ ನೀಡಲಾಗುತ್ತಿದ್ದು , 4 ಸಾವಿರ ಜನ ಮೂರ್ಛ ರೋಗದಿಂದ , 2504 ಜನ ತಿವ್ಯ ಮಟ್ಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದಾರೆ , 709 ಬುದ್ಧಿ ಮಾಂದ್ಯ ಮಕ್ಕಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ . ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳಿಗೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೀರಂಡಹಳ್ಳಿ ಮತ್ತು ಅಂತರಗಂಗೆಯಲ್ಲಿರುವ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು .
ಕಾರ್ಯಕ್ರಮದಲ್ಲಿ ಕೋವಿಡ್ 19 ಹಿನ್ನೆಲೆಯಲ್ಲಿ ಪ್ರತಿಜ್ಞಾವಿಧಿ ಬೋದಿಸಲಾಯಿತು . ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್ ಗಂಗಾಧರ್ , ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪವನೇಶ ಡಿ , ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ , ವಕೀಲರಾದ ಧನ್ ರಾಯ್ , ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರೇಮ ಸೇರಿದಂತೆ ಹಿರಿಯ ಮತ್ತು ಕಿರಿಯ ವಕೀಲರು ಹಾಗೂ ಪೋಲಿಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು .