ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ: ಪೌರ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ತಲಾ ರೂ.7.5 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಪೌರ ಕಾರ್ಮಿಕರಿಗೆ ಉಚಿತ ನಿವೇಶನ ನೀಡಲು ಅಗತ್ಯವಾದ ಜಮೀನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳನ್ನು ಕೋರಲಾಗಿದೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ಪೌರ ಕಾರ್ಮಿಕರ ಸೇವೆ ಅಮೂಲ್ಯವಾದುದು. ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣದ ಮೇಲಿನ ಹಂಗು ತೊರೆದು ಸಾರ್ವಜನಿಕರ ಹಿತಕ್ಕಾಗಿ ದುಡಿಯುತ್ತಿದ್ದಾರೆ. ಸಮಾಜದ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಶ್ರಮ ಗೌರವಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ರೋಟರಿ ಸಂಸ್ಥೆ ಅಧ್ಯಕ್ಷ ಶಿವಮೂರ್ತಿ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿದರು. ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಪರಿಸರ ಅಭಿಯಂತರ ಶೇಖರರೆಡ್ಡಿ, ಕಂದಾಯ ನಿರೀಕ್ಷ ಶಂಕರ್, ನಾಗೇಶ್, ಸದಸ್ಯರಾದ ಅಪ್ಪೂರು ರಾಜು, ಬಿ.ಎಲ್.ಭಾಸ್ಕರ್, ಆನಂದ್, ಶ್ರೀನಿವಾಸ್, ನಾಗರಾಜ್, ಶಾರದ, ಸೀತಾರಾಮರೆಡ್ಡಿ, ರಾಜೇಶ್ವರಿ ಇದ್ದರು.