ಶ್ರೀನಿವಾಸಪುರ: ವಿದ್ಯಾರ್ಥಿಗಳು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಶಿವಬಸಪ್ಪ ಹೇಳಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರ: ವಿದ್ಯಾರ್ಥಿಗಳು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಶಿವಬಸಪ್ಪ ಹೇಳಿದರು. 
  ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಯೋಜನೆಯಡಿ ಶನಿವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ವ್ಯಕ್ತಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯ. ಪೌಷ್ಟಿಕ ಆಹಾರ ಸೇವನೆ ಹಾಗೂ ಉತ್ತಮ ಹವ್ಯಾಸಗಳಿಂದ ಅವುಗಳನ್ನು ಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
  ಶಿಕ್ಷಣ ಹಾಗೂ ಆರೋಗ್ಯದ ನಡುವೆ ಸಂಬಂಧ ಇದೆ. ಆರೋಗ್ಯವಂತ ದೇಹದಲ್ಲಿ ಮಾತ್ರ ಆರೋಗ್ಯವಂತ ಮನಸ್ಸು ಇರಲು ಸಾಧ್ಯ. ಕಲಿಕೆ ಫಲಕಾರಿಯಾಗಲು ಹಾಗೂ ಶೈಕ್ಷಣಿಕ ಪ್ರಗತಿ ಸಾಧಿಸಲು ಆರೋಗ್ಯ ಅತ್ಯಗತ್ಯ ಎಂಬುದನ್ನು ಮರೆಯಬಾರದು. ಪೋಷಕರು ತಮ್ಮ ಮಕ್ಕಳ ಆರೋಗ್ಯದ ಕಡೆ ನಿಗಾ ವಹಿಸಬೇಕು. ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ತಜ್ಞ ವೈದ್ಯರಿಗೆ ತೋರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಹೇಳಿದರು.
  ಬಾಲ ಸ್ವಾಸ್ಥ್ಯ ಯೋಜನೆಯಡಿ, 1 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಚಿಕಿತ್ಸೆ ನೀಡಲಾಗುವುದು. ಈ ಸೌಲಭ್ಯವನ್ನು ಎಲ್ಲ ವಿದ್ಯಾರ್ಥಿಗಳೂ ಬಳಸಿಕೊಳ್ಳಬೇಕು ಎಂದು ಹೇಳಿದರು.
  ಕಾಲೇಜಿನ ಪ್ರಾಂಶುಪಾಲ ಎ.ಲಕ್ಷ್ಮೀನಾರಾಯಣ್‌, ನಿವೃತ್ತ ಪ್ರಾಂಶುಪಾಲ ಬಷೀರ್‌್, ಆರೋಗ್ಯ ಇಲಾಖೆ ಸಿಬ್ಬಂದಿ ನಾಗೇಂದ್ರ, ಪುಷ್ಪಲತಾ, ಲೋಕೇಶ್‌, ಉಪನ್ಯಾಸಕರಾದ ಶೇಷಗಿರಿ, ಮೋಹನ್‌, ಮಮತ, ರೇಣುಕಮ್ಮ ಇದ್ದರು.