ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಗುರುವಾರ ಮಕ್ಕಳ ದಿನಾಚರಣೆ
ಶ್ರೀನಿವಾಸಪುರ: ವಿದ್ಯಾರ್ಥಿಗಳು, ನೆಹರು ಅವರು ಮಕ್ಕಳ ಬಗ್ಗೆ ಹೊಂದಿದ್ದ ಪ್ರೀತಿ ಹಾಗೂ ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ದೇಶ ಕಟ್ಟುವ ಕಾರ್ಯದಲ್ಲಿ ನೆರವಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.
ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳು ನಾಳೆಯ ಪ್ರಜೆಗಳು ಎಂಬ ಮಾತು ಹಳೆಯದಾಯಿತು. ಇಂದಿನ ಮಕ್ಕಳು ಇಂದಿನ ಪ್ರಜೆಗಳು ಎಂಬುದು ಇಂದಿನ ಮಾತು. ಹಾಗಾಗಿ ಪ್ರಜಾ ಪ್ರಜ್ಞೆ ಹೊಂದಿ ಸಮಾಜದ ಒಳಿತಿಗಾಗಿ ಬದುಕಬೇಕು ಎಂದು ಹೇಳಿದರು.
ಗ್ರಾಮೀಣ ಮಕ್ಕಳು ತಮ್ಮ ಗ್ರಾಮದ ಬಗ್ಗೆ ಹೆಮ್ಮೆ ಪಟ್ಟುಕೊಳ್ಳಬೇಕು. ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಲು ಪೂರಕವಾಗಿ ಯೋಜನೆಗಳನ್ನು ರೂಪಿಸಬೇಕು. ನೆಹರು ಅವರ ಆದರ್ಶ ಪಾಲನೆ ಮಾಡಬೇಕು ಎಂದು ಹೇಳಿದರು.
ಕಾಲೆಜಿನ ಪ್ರಾಂಶುಪಾಲ ಸೀನಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಯರಾದ ಅಫ್ರಿನ್ ತಾಜ್, ಸುಷ್ಮ, ಚೈತ್ರ ನೆಹರು ಅವರ ಜೀವನ ಸಾಧನೆ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಉಪನ್ಯಾಸಕರಾದ ಶೇಖರ್, ಶಾಲಿನಿ, ನಿರ್ವಾಹಕಿ ಹೀನಾ ಇದ್ದರು.